ಬೆಂಗಳೂರು: ‘ಧರ್ಮಸ್ಥಳ ಪ್ರಕರಣದ ಎಲ್ಲಾ ಬೆಳವಣಿಗೆಗಳನ್ನು ನಾನೇ ಖುದ್ದಾಗಿ ಸೂಕ್ಷ್ಮವಾಗಿ ಗಮನಿಸುತ್ತಿದ್ದೇನೆ. ಈ ಬಗ್ಗೆ ಸಚಿವ ಸಂಪುಟ ನೇತೃತ್ವದಲ್ಲಿ ಸಭೆ ನಡೆಸುತ್ತೇವೆ. ಬಳಿಕ ಮುಂದಿನ ನಿರ್ಧಾರ ಕೈಗೊಳ್ಳುತ್ತೇವೆ’ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಕರ್ನಾಟಕದ ಸ್ವಾಮೀಜಿಗಳ ನಿಯೋಗಕ್ಕೆ ಮಹತ್ವದ ಭರವಸೆ ನೀಡಿದ್ದಾರೆ. ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿದ್ದೇನೆ ಎಂದು ಮಾಸ್ಕ್ಮ್ಯಾನ್ ಚಿನ್ನಯ್ಯ ಮಾಡಿರುವ ಆರೋಪ ಸಂಬಂಧಿತ ಎಲ್ಲ ಪ್ರಕರಣಗಳ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳಕ್ಕೆ (NIA) ವಹಿಸಬೇಕೆಂಬ ಆಗ್ರಹ ಹೆಚ್ಚಾದ ಬೆನ್ನಲ್ಲೇ, ಪಂಚಮಸಾಲಿ ಪೀಠದ ವಚನಾನಂದ ಸ್ವಾಮೀಜಿ, ಮಂಗಳೂರಿನ ಗುರುಪುರ ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮೀಜಿ ನೇತೃತ್ವದ ಸನಾತನ ಸಂತ ನಿಯೋಗ ನವದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ, ಎನ್ಐಎ ತನಿಖೆಗೆ ವಹಿಸುವಂತೆ ಮನವಿ ಸಲ್ಲಿಸಿತು.ಗೃಹ ಸಚಿವ ಅಮಿತ್ ಶಾ ರ ದೆಹಲಿ ಕಚೇರಿಯಲ್ಲಿ ಭೇಟಿಯಾದ ಸ್ವಾಮೀಜಿಗಳು, ಧರ್ಮಸ್ಥಳ ಪ್ರಕರಣ ಕುರಿತು ಗೃಹ ಸಚಿವರ ಜೊತೆಗೆ ಸುದೀರ್ಘ ಚರ್ಚೆ ನಡೆಸಿದರು. ಕ್ಷೇತ್ರದ ವಿರುದ್ಧ ನಡೆಯುತ್ತಿರುವ ಅಪಪ್ರಚಾರದ ಕುರಿತು ಮಾಹಿತಿ ನೀಡಿದರು.
ಸ್ವಾಮೀಜಿಗಳ ಬಳಿ ಅಮಿತ್ ಶಾ ಹೇಳಿದ್ದೇನು?
ಧರ್ಮಸ್ಥಳ ಪ್ರಕರಣದ ಬಗ್ಗೆ ಸಚಿವ ಸಂಪುಟ ಸಭೆ ನಡೆಸಲಿದೆ. ಧರ್ಮ ಕ್ಷೇತ್ರಗಳ ವಿರುದ್ಧದ ಅಪಪ್ರಚಾರಕ್ಕೆ ಕಡಿವಾಣ ಹಾಕಲು ಹೊಸ ಕಾನೂನು ತರುತ್ತೇವೆ. ನೀವು ಸಮಾಜವನ್ನ ಜಾಗೃತಿಗೊಳಿಸಿ ಎಂದು ಸ್ವಾಮೀಜಿಗಳ ಬಳಿ ಗೃಹ ಸಚಿವ ಅಮಿತ್ ಶಾ ತಿಳಿಸಿದ್ದಾರೆ. ಸ್ವಾಮೀಜಿಗಳಿಂದ ಸುಮಾರು ಒಂದು ಗಂಟೆಗಳ ಕಾಲ ಮಾಹಿತಿ ಪಡೆದ ನಂತರ ಅಮಿತ್ ಶಾ ಈ ಪ್ರತಿಕ್ರಿಯೆ ನೀಡಿದರು.ಧರ್ಮಸ್ಥಳ ಪ್ರಕರಣದಲ್ಲಿ ಯೂಟ್ಯೂಬರ್ಗಳಿಗೆ ವಿದೇಶಗಳಿಂದ ಹಣಕಾಸು ನೆರವು ಹರಿದು ಬಂದಿದೆ ಎಂಬ ಆರೋಪ ಸಂಬಂಧ ಜಾರಿ ನಿರ್ದೇಶನಾಲಯ ಈಗಾಗಲೇ ಪ್ರಾಥಮಿಕ ತನಿಖೆ ಆರಂಭಿಸಿದೆ. ಇದೀಗ ಎನ್ಐಎ ತನಿಖೆ ಬಗ್ಗೆ ಕುತೂಹಲ ಹೆಚ್ಚಾಗಿದೆ.
ಯೂಟ್ಯೂಬರ್ ಅಭಿಷೇಕ್ನ ತೀವ್ರ ವಿಚಾರಣೆ
ಬುರುಡೆ ರಹಸ್ಯ ಹಾಗೂ ಅನನ್ಯ ಭಟ್ ನಾಪತ್ತೆ ಪ್ರಕರಣ ಸಂಬಂಧ ಎಸ್ಐಟಿ ಅಧಿಕಾರಿಗಳು ಯೂಟ್ಯೂಬರ್ ಅಭಿಷೇಕ್ನನ್ನು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ. ಬುಧವಾರ ತಡರಾತ್ರಿ ವರೆಗೂ ಅಭಿಷೇಕ್ನ ವಿಚಾರಣೆ ನಡೆಸಲಾಗಿದೆ. ಪ್ರಕರಣದ ಕುರಿತು ಯೂಟ್ಯೂಬ್ ವಿಡಿಯೋಗಳಲ್ಲಿ ಸುಳ್ಳು ಮಾಹಿತಿ ಪ್ರಸಾರ ಮಾಡಿದ್ದ ಆರೋಪ ಆತನ ಮೇಲಿದೆ. ಪ್ರಕರಣದ ದಾಖಲಾಗುವ ಮೊದಲೇ ವಿಡಿಯೋಗಳನ್ನು ಮಾಡಿದ್ದ ಅಭಿಷೇಕ್, ಅದಕ್ಕೂ ಮುನ್ನ 6 ತಿಂಗಳ ಹಿಂದೆ ಗಿರೀಶ್ ಮಟ್ಟಣ್ಣವರ್ ಸಂಪರ್ಕಿಸಿದ್ದ.ಏತನ್ಮಧ್ಯೆ, ಲೈಕ್ಸ್ ಹಾಗೂ ವ್ಯೂಗಾಗಿ ವಿಡಿಯೋ ಮಾಡಿದ್ದೆ ಎಂದು ಎಸ್ಐಟಿ ವಿಚಾರಣೆ ವೇಳೆ ಯೂಟ್ಯೂಬರ್ ತಪ್ಪೊಪ್ಪಿ ಕೊಂಡಿದ್ದಾನೆ. ಅಲ್ಲದೆ, ಎಸ್ಐಟಿ ಅಧಿಕಾರಿಗಳ ಮುಂದೆ ಕಣ್ಣಿರು ಹಾಕಿದ್ದಾನೆ ಎಂದು ಮೂಲಗಳು ತಿಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನಷ್ಟು ಯೂಟ್ಯೂಬರ್ಗಳಿಗೆ ಎಸ್ಐಟಿ ನೋಟಿಸ್ ನೀಡಲಿದೆ.
ಧರ್ಮಸ್ಥಳದಲ್ಲಿ ಶುಕ್ರವಾರ ಧರ್ಮ ಜಾಗೃತಿ ಸಮಾವೇಶ
ಧರ್ಮಸ್ಥಳದ ವಿರುದ್ಧ ಅಪಪ್ರಚಾರ ಖಂಡಿಸಿ ಶುಕ್ರವಾರ ಧರ್ಮಸ್ಥಳದಲ್ಲಿ ಧರ್ಮ ಜಾಗೃತಿ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಧರ್ಮ ಸಂರಕ್ಷಣಾ ಸಮಿತಿಯಿಂದ ಸಮಾವೇಶ ಆಯೋಜನೆ ಮಾಡಲಾಗುತ್ತಿದ್ದು ದೇವಸ್ಥಾನ, ದೈವಸ್ಥಾನ, ಬಸದಿಗಳ ಪ್ರಮುಖರು ಭಾಗಿಯಾಗಲಿದ್ದಾರೆ. ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು ಜಿಲ್ಲೆಯನ್ನು ಕೇಂದ್ರೀಕರಿಸಿ ಸಮಾವೇಶ ನಡೆಸಲಾಗುತ್ತಿದೆ. ಧರ್ಮಸ್ಥಳದ ಅಮೃತವರ್ಷಿಣಿ ಸಭಾಭವನದಲ್ಲಿ ನಡೆಯಲಿದೆ.ಮತ್ತೊಂದೆಡೆ, ಮಾಸ್ಕ್ಮ್ಯಾನ್ ಚಿನ್ನಯ್ಯನ ಎಸ್ಐಟಿ ವಿಚಾರಣೆ ಮುಂದುವರಿದಿದೆ. 12 ದಿನದ ಕಸ್ಟಡಿ ಅಂತ್ಯವಾದ ಹಿನ್ನೆಲೆಯಲ್ಲಿ ಬುಧವಾರ ಆತನನ್ನು ಬೆಳ್ತಂಗಡಿ ಕೋರ್ಟ್ಗೆ ಹಾಜರುಪಡಿಸಲಾಗಿತ್ತು. ಈ ವೇಳೆ ಕೋರ್ಟ್ ಹಾಲ್ನ ಬಾಗಿಲು ಮುಚ್ಚಿ ಚಿನ್ನಯ್ಯನ ವಿಚಾರಣೆ ನಡೆಸಲಾಯಿತು. ಎಸ್ಐಟಿ ತನಿಖಾಧಿಕಾರಿ, ಸರ್ಕಾರಿ ಅಭಿಯೋಜಕ, ಚಿನ್ನಯ್ಯ ಹಾಗೂ ಕಾನೂನು ಸೇವಾ ಪ್ರಾಧಿಕಾರದ ಇಬ್ಬರು ವಕೀಲರು ಉಪಸ್ಥಿತರಿದ್ದರು. ವಿಚಾರಣೆ ನಡೆಸಿದ ಕೋರ್ಟ್, ಮತ್ತೆ ಮೂರು ದಿನ ಚಿನ್ನಯ್ಯನನ್ನು ಎಸ್ಐಟಿ ವಶಕ್ಕೆ ನೀಡಿದೆ. ಸೆಪ್ಟೆಂಬರ್ 6 ರಂದು ಮತ್ತೆ ಕೋರ್ಟ್ಗೆ ಹಾಜರುಪಡಿಸಲು ಸೂಚಿಸಲಾಗಿದೆ. ಹೀಗಾಗಿ ಚಿನ್ನಯ್ಯನ ವಿಚಾರಣೆಯನ್ನು ಎಸ್ಐಟಿ ತೀವ್ರಗೊಳಿಸಿದೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.







