ನವದೆಹಲಿ: ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಕೆಟ್ಟ ಆಡಳಿತ, ನಡವಳಿಕೆಯಿಂದಲೇ ಮದ್ದೂರಿನಲ್ಲಿ ಗಣಪತಿ ಮೆರವಣಿಗೆ ಮೇಲೆ ಕಲ್ಲು ಎಸೆಯುವಂಥ ಪರಿಸ್ಥಿತಿ ಸೃಷ್ಟಿಯಾಗಿದೆ ಎಂದು ಕೇಂದ್ರ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಆರೋಪಿಸಿದರು.ಘಟನೆಯ ವಿಷಯ ತಿಳಿಯುತ್ತಿದ್ದಂತೆಯೇ ಜಿಲ್ಲಾಧಿಕಾರಿ ಹಾಗೂ ಪೊಲೀಸ್ ವರಿಷ್ಠಾಧಿಕಾರಿಗಳ ಜತೆ ಮಾತನಾಡಿ ಮಾಹಿತಿ ಪಡೆದುಕೊಂಡ ನಂತರ ಮಾಧ್ಯಮಗಳ ಜತೆ ಮಾತನಾಡಿದ ಅವರು; ಮಂಡ್ಯ ಜಿಲ್ಲೆಯಲ್ಲಿ ಇಷ್ಟು ದೊಡ್ಡಮಟ್ಟದಲ್ಲಿ ಇಂಥ ಕೆಟ್ಟ ಘಟನೆಗಳು ನಡೆಯಲು ಕಾಂಗ್ರೆಸ್ ಸರಕಾರವೇ ಕಾರಣ ಎಂದು ದೂರಿದರು.ಶಾಂತಿ ನೆಮ್ಮದಿಗೆ ಹೆಸರಾಗಿದ್ದ ಮಂಡ್ಯ ಜಿಲ್ಲೆಗೆ ಬೆಂಕಿ ಹಚ್ಚುವ ಕೆಲಸವಾಗುತ್ತಿದೆ. ಹಿಂದೆಂದೂ ಈ ಜಿಲ್ಲೆಯಲ್ಲಿ ಇಂಥ ಘಟನೆಗಳು ಆಗಿಲ್ಲ. ನಾಗಮಂಗಲದಲ್ಲಿ ಕೆಲ ದುಷ್ಟಶಕ್ತಿಗಳು ಬೆಂಕಿ ಹಾಕುವ ಕೆಲಸ ಮಾಡಿದವು. ಈಗ ಮದ್ದೂರಿನಲ್ಲಿಯೂ ಅಂಥ ಶಕ್ತಿಗಳೇ ಜನರ ನೆಮ್ಮದಿ ಕೆಡಿಸುವ ಹುನ್ನಾರ ನಡೆಸಿವೆ ಎಂದು ಅವರು ಆಪಾದಿಸಿದರು.ಮಂಡ್ಯ ಜಿಲ್ಲೆ ಯಾವಾಗಲೂ ಶಾಂತಿ ಸೌಹಾರ್ದತೆಗೆ ಹೆಸರಾಗಿದೆ. ಜನರು ಕಷ್ಟಪಟ್ಟು ಕೆಲಸ ಮಾಡುತ್ತಾ ನೆಮ್ಮದಿ ಜೀವನ ಮಾಡುತ್ತಿದ್ದಾರೆ. ಕುವೆಂಪು ಅವರ ಆಶಯದ ಸರ್ವ ಜನಾಂಗದ ಶಾಂತಿಯ ತೋಟವಾಗಿದೆ. ಆದರೆ ಕೆಲ ಶಕ್ತಿಗಳು ವ್ಯವಸ್ಥಿತವಾಗಿ ಜನರ ನೆಮ್ಮದಿ ಹಾಳು ಮಾಡುವ ಕೆಲಸ ಮಾಡುತ್ತಿವೆ. ಕಾಂಗ್ರೆಸ್ ಪಕ್ಷದ ಓಲೈಕೆ ರಾಜಕಾರಣದಿಂದ ಇಂಥ ಕೆಟ್ಟ ಪರಿಸ್ಥಿತಿ ರಾಜ್ಯದ ಉದ್ದಗಲಕ್ಕೂ ಸೃಷ್ಟಿಯಾಗಿದೆ ಎಂದು ಅವರು ಕಳವಳ ವ್ಯಕ್ತಪಡಿಸಿದರು.ಶಾಂತಿ ನೆಲೆಸುವುದಕ್ಕೆ ಎಲ್ಲರೂ ಸಹಕಾರ ನೀಡಬೇಕು. ನಾನು ಈಗಾಗಲೇ ಜಿಲ್ಲಾಧಿಕಾರಿ ಮತ್ತು ಪೋಲೀಸ್ ವರಿಷ್ಠಾಧಿಕಾರಿಗಳ ಜತೆ ಮಾತನಾಡಿ ಕಿಡಿಗೇಡಿಗಳ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದ್ದೇನೆ ಎಂದು ಕೇಂದ್ರ ಸಚಿವರು ಹೇಳಿದರು.
ಸರ್ವ ಜನಾಂಗದ ಶಾಂತಿಯ ತೋಟವಾದ ರಾಜ್ಯಕ್ಕೆ ಬೆಂಕಿ ಹಚ್ಚುವ ಕೆಲಸ ಆಗುತ್ತಿದೆ. ಕಾಂಗ್ರೆಸ್ ನಡವಳಿಕೆ, ಅವರ ಆಡಳಿತವೇ ಈ ಘಟನೆಗೆ ಕಾರಣ. ಹಿಂದೂಗಳು ಅಸಮಾಧಾನವಾಗುವ ರೀತಿಯಲ್ಲಿ ಕಾಂಗ್ರೆಸ್ ಕೆಲಸ ಮಾಡುತ್ತಿದೆ. ಇದನ್ನು ನಾನು ರಾಜಕೀಯ ಉದ್ದೇಶದಿಂದ ಹೇಳುತ್ತಿಲ್ಲ. ರಾಜ್ಯದ ಹಲವೆಡೆ ಗಲಾಟೆಗಳು ನಡೆಯಲು ಕಾಂಗ್ರೆಸ್ ಪಕ್ಷವೇ ಕಾರಣ. ಈ ಮೂಲಕ ಕಾಂಗ್ರೆಸ್ ಪಕ್ಷವು ತನ್ನ ಅವನತಿಯನ್ನು ತಾನೇ ತಂದುಕೊಳ್ಳುತ್ತಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.ಈ ಹಿಂದೆ ಇಂಥ ಘಟನೆಗಳು ಒಂದೆರಡು ಜಿಲ್ಲೆಗಳಲ್ಲಿ ಅಲ್ಲೊಂದು ಇಲ್ಲೊಂದು ನಡೆಯುತ್ತಿದ್ದವು. ಕಾಂಗ್ರೆಸ್ ಸರಕಾರ ಬಂದ ಮೇಲೆ ಎಲ್ಲಾ ಜಿಲ್ಲೆಗಳಲ್ಲಿ ಪ್ರತೀ ಭಾಗದಲ್ಲಿಯೂ ಅವ್ಯಾಹತವಾಗಿ ನಡೆಯುತ್ತಿವೆ. ಆ ಕೆಟ್ಟ ಪರಿಸ್ಥಿತಿ ಕಾಂಗ್ರೆಸ್ ಆಡಳಿತದಲ್ಲಿ ಇಡೀ ರಾಜ್ಯಕ್ಕೆ ವ್ಯಾಪಿಸಿದೆ. ಕೇವಲ ಓಲೈಕೆ ರಾಜಕಾರಣದಿಂದ ಇಷ್ಟೆಲ್ಲಾ ನಡೆಯುತ್ತಿದೆ ಎಂದು ಕೇಂದ್ರ ಸಚಿವರು ದೂರಿದರು.ಇಂಥ ಗಳಭೆಗಳನ್ನು ನೋಡಿದರೆ ಕಾಂಗ್ರೆಸ್ ಪಕ್ಷದ ಅವನತಿ ಆರಂಭವಾಗಿದೆ ಎಂದು ಅರ್ಥವಾಗುತ್ತದೆ. ಇದೆಲ್ಲವನ್ನೂ ಕಾಂಗ್ರೆಸ್ ಅರ್ಥ ಮಾಡಿಕೊಳ್ಳದಿದ್ದರೆ ಇದು ಸೆಲ್ಪ್ ಸುಸೈಡ್ (ಆತ್ಮಹತ್ಯೆ) ಆಗಲಿದೆ. ಸಾರ್ವಜನಿಕ ಆಸ್ತಿ-ಪಾಸ್ತಿ ಹಾನಿ ಆಗಬಾರದು. ಕಟ್ಟುನಿಟ್ಟಿನ ಕ್ರಮ ಕೈಗೊಂಡು ಕಿಡಿಗೇಡಿಗಳ ಹೆಡೆಮುರಿ ಕಟ್ಟುವಂತೆ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದ್ದೇನೆ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರ ಕೊಟ್ಟರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.







