ಜೀವಂತ ವ್ಯಕ್ತಿಗೆ ಮರಣ ಪ್ರಮಾಣಪತ್ರ ; ಹೈಕೋರ್ಟ್ ತರಾಟೆ
ಬೆಂಗಳೂರು: ಜೀವಂತ ವ್ಯಕ್ತಿಗೆ ಮರಣ ಪ್ರಮಾಣಪತ್ರ ನೀಡಿದ ಗ್ರೇಟರ್ ಬೆಂಗಳೂರು ಅಥಾರಿಟಿ (ಜಿಬಿಎ)ಯ ಜನನ ಮತ್ತು ಮರಣ ನೋಂದಣಾಧಿಕಾರಿಗೆ ಹೈಕೋರ್ಟ್ ಛಾಟಿ ಬೀಸಿದೆ.
ಬೆಂಗಳೂರಿನ ಚಿಕ್ಕಪೇಟೆಯ ವಲಯ ಕಚೇರಿಯ ಜನನ ಮತ್ತು ಮರಣ ನೋಂದಣಾಧಿಕಾರಿ ನೀಡಿರುವ ತಾತ್ಕಾಲಿಕ ಮರಣ ಪ್ರಮಾಣಪತ್ರವನ್ನು ರದ್ದುಪಡಿಸಲು ನಿರ್ದೇಶಿಸಬೇಕೆಂದು ಕೋರಿ ಡಿ.ಮೆಹಬೂಬ್ ಬಾಷಾ ಎಂಬವರು ಸಲ್ಲಿಸಿರುವ ಅರ್ಜಿಯನ್ನು ವಿಚಾರಣೆಗೆ ಕೈಗೆತ್ತಿಕೊಂಡ ನ್ಯಾಯಮೂರ್ತಿ ಸಚಿನ್ ಶಂಕರ್ ಮಗದುಮ್ ಅವರಿದ್ದ ಏಕಸದಸ್ಯ ಪೀಠ, ಮುಂದಿನ ವಿಚಾರಣೆಯ ವೇಳೆಗೆ ಮರಣ ಪ್ರಮಾಣಪತ್ರವನ್ನು ರದ್ದುಪಡಿಸಿರುವ ಹಿಂಬರಹ ಸಲ್ಲಿಸಬೇಕು ತಾಕೀತು ಮಾಡಿತು.
ಬದುಕಿರುವ ವ್ಯಕ್ತಿಯ ಹೆಸರಿನಲ್ಲಿ ನೀಡಿರುವ ಮರಣ ಪ್ರಮಾಣಪತ್ರವನ್ನು ಹಿಂಪಡೆಯದೇ ಇರುವುದರಿಂದ ಅವರು ಅನಿವಾರ್ಯವಾಗಿ ನ್ಯಾಯಾಲಯದ ಕದ ತಟ್ಟುವಂತಾಗಿದೆ. ಜನನ ಮತ್ತು ಮರಣಗಳ ರಿಜಿಸ್ಟ್ರಾರ್ ಅವರು ಬುಧವಾರದೊಳಗೆ ಮರಣ ಪ್ರಮಾಣಪತ್ರ ರದ್ದುಪಡಿಸಿರುವ ಹಿಂಬರಹವನ್ನು ಸಲ್ಲಿಸಬೇಕು. ಇಲ್ಲವಾದಲ್ಲಿ ಸಂಬಂಧಿತ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಕೆ ನೀಡಿದೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿ, ಜಿಬಿಎಯ ಜನನ ಮತ್ತು ಮರಣ ನೋಂದಣಾಧಿಕಾರಿ, ಕಿದ್ವಾಯಿ ಸ್ಮಾರಕ ಆಸ್ಪತ್ರೆಯ ಆಡಳಿತಾಧಿಕಾರಿ, ಚಿಕ್ಕಪೇಟೆಯ ವೈದ್ಯಾಧಿಕಾರಿ, ಜಿಬಿಎಯ ಸಾಂಖ್ಯಿಕ ವಿಭಾಗದ ಜಂಟಿ ನಿರ್ದೇಶಕರಿಗೆ ಕೋರ್ಟ್ ನೋಟಿಸ್ ನೀಡಿದೆ.
