ಅಂಗನವಾಡಿ ನೇಮಕಾತಿ: ತಾತ್ಕಾಲಿಕ ಆಯ್ಕೆಪಟ್ಟಿ ಪ್ರಕಟ, ಏ.10ರವರೆಗೆ ಆಕ್ಷೇಪಣೆ ಅವಕಾಶ
ಚಿತ್ರದುರ್ಗ, ಮಾ.31: ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ ಖಾಲಿ ಇರುವ ಅಂಗನವಾಡಿ ಹುದ್ದೆಗಳ ಭರ್ತಿಗೆ ಸಂಬಂಧಿಸಿದ ತಾತ್ಕಾಲಿಕ ಆಯ್ಕೆಪಟ್ಟಿಯನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಪ್ರಕಟಿಸಿದೆ.
ಭರಮಸಾಗರ, ಚಿತ್ರದುರ್ಗ, ಚಳ್ಳಕೆರೆ, ಹಿರಿಯೂರು, ಹೊಳಲ್ಕೆರೆ, ಹೊಸದುರ್ಗ ಮತ್ತು ಮೊಳಕಾಲ್ಮೂರು ತಾಲ್ಲೂಕುಗಳ ಶಿಶು ಅಭಿವೃದ್ಧಿ ಯೋಜನೆಗಳ ವ್ಯಾಪ್ತಿಯಲ್ಲಿ 22 ಅಂಗನವಾಡಿ ಕಾರ್ಯಕರ್ತೆ ಹಾಗೂ 228 ಸಹಾಯಕಿ ಹುದ್ದೆಗಳಿಗಾಗಿ 2025ರ ಆಗಸ್ಟ್ 5ರಂದು ಅಧಿಸೂಚನೆ ಹೊರಡಿಸಿ, ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು.
ಮಾ.12ರಂದು ನಡೆದ ಜಿಲ್ಲಾ ಮಟ್ಟದ ಆಯ್ಕೆ ಸಮಿತಿ ಸಭೆಯಲ್ಲಿ ಅರ್ಹ ಅಭ್ಯರ್ಥಿಗಳ ತಾತ್ಕಾಲಿಕ ಪಟ್ಟಿಯನ್ನು ಸಿದ್ಧಪಡಿಸಲಾಗಿದೆ. ಈ ಪಟ್ಟಿಯನ್ನು ಸಂಬಂಧಿಸಿದ ತಾಲ್ಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗಳು, ಅಂಗನವಾಡಿ ಕೇಂದ್ರಗಳು, ಗ್ರಾಮ ಪಂಚಾಯಿತಿಗಳು, ಶಾಲೆಗಳು, ಸಮುದಾಯ ಭವನಗಳು ಹಾಗೂ ಗ್ರಂಥಾಲಯಗಳಲ್ಲಿ ಪ್ರಕಟಿಸಲಾಗಿದೆ.
ಪಟ್ಟಿಗೆ ಸಂಬಂಧಿಸಿದಂತೆ ಯಾವುದೇ ಆಕ್ಷೇಪಣೆಗಳಿದ್ದಲ್ಲಿ, ಸೂಕ್ತ ದಾಖಲೆಗಳೊಂದಿಗೆ ಏಪ್ರಿಲ್ 10ರ ಸಂಜೆ 5.30ರೊಳಗಾಗಿ ಸಂಬಂಧಿತ ಕಚೇರಿಗಳಿಗೆ ಸಲ್ಲಿಸಲು ಸೂಚಿಸಲಾಗಿದೆ ಎಂದು ಇಲಾಖೆಯ ಉಪನಿರ್ದೇಶಕ ವಿಜಯಕುಮಾರ್ ತಿಳಿಸಿದ್ದಾರೆ.
