ಮಹಿಳಾ ಸಮುದಾಯ ಸದಾ ಕ್ರಿಯಾಶೀಲತೆಗೆ ಮುನ್ನಡೆಯಲಿ: ಗದ್ದಿಗೆತಿಪ್ಪೇಸ್ವಾಮಿ
ಚಳ್ಳಕೆರೆ, ಮಾ.31: ದೇಶದ ಅಭಿವೃದ್ಧಿಯಲ್ಲಿ ಮಹಿಳೆಯರ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಇಂದಿನ ದಿನಗಳಲ್ಲಿ ರಾಜಕೀಯದಿಂದ ಹಿಡಿದು ಎಲ್ಲಾ ಕ್ಷೇತ್ರಗಳಲ್ಲಿ ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಸಾಬೀತುಪಡಿಸಿದ್ದಾರೆ ಎಂದು ತಾಲ್ಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ಗದ್ದಿಗೆತಿಪ್ಪೇಸ್ವಾಮಿ ಹೇಳಿದ್ದಾರೆ.
ನಗರದ ವಾಲ್ಮೀಕಿ ಕಲ್ಯಾಣಮಂದಿರದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಆಯೋಜಿಸಿದ್ದ ವಿಶ್ವ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ಮಂಗಳವಾರ ಉದ್ಘಾಟಿಸಿ ಅವರು ಮಾತನಾಡಿದರು.
ಸರ್ಕಾರ ಮಹಿಳೆಯರಿಗೆ ವಿಶೇಷ ಆದ್ಯತೆ ನೀಡುತ್ತಿದ್ದು, ಉಚಿತ ಬಸ್ ಪ್ರಯಾಣ, ಗೃಹಲಕ್ಷ್ಮಿ ಯೋಜನೆಯಡಿ ಮಾಸಿಕ ₹2000 ನೆರವು ಸೇರಿದಂತೆ ಹಲವು ಸೌಲಭ್ಯಗಳನ್ನು ಜಾರಿಗೆ ತಂದಿದೆ. ಸ್ವಯಂ ಉದ್ಯೋಗ ಆರಂಭಿಸಲು ಮಹಿಳೆಯರಿಗೆ ಆರ್ಥಿಕ ಬೆಂಬಲ ನೀಡುವತ್ತ ಸರ್ಕಾರ ಮುಂದಾಗಿದೆ ಎಂದರು.
ಕ್ರೀಡೆ, ವಿಜ್ಞಾನ, ಸಾಹಿತ್ಯ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಮಹಿಳೆಯರು ತಮ್ಮ ಪ್ರತಿಭೆ ಮೆರೆದಿದ್ದು, ಸಮಾಜದಲ್ಲಿ ಗೌರವ ಹೆಚ್ಚಿಸಿಕೊಂಡಿದ್ದಾರೆ. ಮಹಿಳೆಯರ ಮೇಲಿನ ಅಪರಾಧಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಇನ್ನಷ್ಟು ಕ್ರಮ ಅಗತ್ಯವಿದೆ ಎಂದು ಅವರು ಅಭಿಪ್ರಾಯಪಟ್ಟರು.
ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಎಚ್. ಶಶಿಧರ ಮಾತನಾಡಿ, ಎಲ್ಲಾ ಕ್ಷೇತ್ರಗಳಲ್ಲಿ ಮಹಿಳೆಯರ ಪಾಲ್ಗೊಳ್ಳುವಿಕೆ ಹೆಚ್ಚಾಗಿದ್ದು, ಉದ್ಯೋಗ ಕ್ಷೇತ್ರದಲ್ಲೂ ಸಮಾನ ಅವಕಾಶಗಳನ್ನು ಪಡೆದು ತಮ್ಮ ಕರ್ತವ್ಯವನ್ನು ನಿಷ್ಠೆಯಿಂದ ನಿರ್ವಹಿಸುತ್ತಿದ್ದಾರೆ ಎಂದರು. ಯಾವುದೇ ಸಂಕಷ್ಟದಲ್ಲಿಯೂ ಧೈರ್ಯ ಕಳೆದುಕೊಳ್ಳದೆ ಮುಂದೆ ಸಾಗಬೇಕು ಎಂದು ಸಲಹೆ ನೀಡಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಕೆಡಿಪಿ ಸದಸ್ಯ ಓ. ರಂಗಸ್ವಾಮಿ, ಸಿಡಿಪಿಒ ರಾಜಾನಾಯ್ಕ, ಆರ್. ವೇದಾವತಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.
