ಮೆಡಿಕಲ್ ಕಾಲೇಜು ಊಹಾಪೋಹಕ್ಕೆ ಬಿತ್ತು ತೆರೆ; ಯಾವುದೇ ಗೊಂದಲ, ಬದಲಾವಣೆಯಿಲ್ಲ
ಚಿತ್ರದುರ್ಗ: ಜಿಲ್ಲೆಯ ವೈದ್ಯಕೀಯ ಶಿಕ್ಷಣ ಕ್ಷೇತ್ರಕ್ಕೆ ಮಹತ್ವದ ಉತ್ತೇಜನ ನೀಡುವ ನಿರ್ಧಾರವಾಗಿ, ನಗರದ ಹೊರವಲಯದ ಕುಂಚಿಗನಾಳ್ ಗುಡ್ಡದಲ್ಲಿ ನಿರ್ಮಾಣಗೊಂಡಿರುವ ನೂತನ ಜಿಲ್ಲಾಧಿಕಾರಿ ಕಚೇರಿ ಕಟ್ಟಡದಲ್ಲೇ ವೈದ್ಯಕೀಯ ಕಾಲೇಜು ಆರಂಭಿಸಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ಮಹತ್ವದ ಘೋಷಣೆ ಮಾಡಿದ್ದಾರೆ.
ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಯ ಹಿಂಭಾಗದಲ್ಲಿ ನಿರ್ಮಾಣವಾಗುತ್ತಿರುವ ವೈದ್ಯಕೀಯ ಕಾಲೇಜಿನ ಕಾಮಗಾರಿ ಪ್ರಗತಿ ಪರಿಶೀಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಈ ಬಗ್ಗೆ ಕಂದಾಯ ಇಲಾಖೆಯೊಂದಿಗೆ ನಡೆದ ಮಾತುಕತೆಯಲ್ಲಿ ಸಕಾರಾತ್ಮಕ ಒಪ್ಪಿಗೆ ದೊರೆತಿದೆ ಎಂದು ತಿಳಿಸಿದರು.
ಡಿಸಿ ಕಚೇರಿಗಾಗಿ ನಿರ್ಮಿಸಲಾದ ಆಧುನಿಕ ಕಟ್ಟಡವನ್ನು ತಾತ್ಕಾಲಿಕವಾಗಿ ವೈದ್ಯಕೀಯ ಕಾಲೇಜಿಗೆ ಬಳಸಿಕೊಳ್ಳುವ ಮೂಲಕ ಶೀಘ್ರದಲ್ಲೇ ಶೈಕ್ಷಣಿಕ ಚಟುವಟಿಕೆಗಳಿಗೆ ಚಾಲನೆ ನೀಡಲಾಗುತ್ತದೆ. ಆಸ್ಪತ್ರೆಯ ಹಿಂಭಾಗದಲ್ಲಿ ನಿರ್ಮಾಣವಾಗುತ್ತಿರುವ ಹೊಸ ಸಂಕೀರ್ಣವನ್ನು ನರ್ಸಿಂಗ್ ಕಾಲೇಜು, ಫಿಸಿಯೋಥೆರಪಿ ಹಾಗೂ ಮಕ್ಕಳ ಚಿಕಿತ್ಸಾ ವಿಭಾಗಗಳಿಗೆ ಮೀಸಲಿಡುವ ಯೋಜನೆ ರೂಪಿಸಲಾಗಿದೆ ಎಂದು ಹೇಳಿದರು.
ಕಾಮಗಾರಿ ಪೂರ್ಣಗೊಳ್ಳಲು ಇನ್ನೂ ಸ್ವಲ್ಪ ಸಮಯ ಬೇಕಾಗುವ ಹಿನ್ನೆಲೆಯಲ್ಲಿ, ಅಷ್ಟರೊಳಗೆ ವಿಶ್ವವಿದ್ಯಾಲಯದ ಕ್ಯಾಂಪಸ್‌ನಲ್ಲಿ ತರಗತಿಗಳು ನಡೆಯಲಿವೆ ಎಂದು ಸಚಿವರು ಸ್ಪಷ್ಟಪಡಿಸಿದರು.
ಇಲಾಖೆಯಲ್ಲಿ ಹಣದ ಕೊರತೆ ಎಂಬ ಪ್ರಶ್ನೆಯೇ ಇಲ್ಲ. ಬಿಲ್‌ಗಳ ಬಾಕಿಯೂ ಇಲ್ಲ ಎಂದು ಸಚಿವರು ತಿಳಿಸಿ, ಜಿಲ್ಲಾ ಆಸ್ಪತ್ರೆಯ ಸಿಟಿ ಸ್ಕ್ಯಾನ್ ಸಮಸ್ಯೆಯಿಂದ ರೋಗಿಗಳು ಅನುಭವಿಸುತ್ತಿರುವ ತೊಂದರೆಗಳಿಗೆ ತಕ್ಷಣ ಪರಿಹಾರ ಕಲ್ಪಿಸುವಂತೆ ಜಿಲ್ಲಾ ಶಸ್ತ್ರಚಿಕಿತ್ಸಕರಿಗೆ ಸೂಚನೆ ನೀಡಿರುವುದಾಗಿ ಹೇಳಿದರು.
ಪರಿಶೀಲನೆಯ ಬಳಿಕ ಜಿಲ್ಲಾ ತಾಯಿ ಮತ್ತು ಮಕ್ಕಳ ಆಸ್ಪತ್ರೆಗೆ ಭೇಟಿ ನೀಡಿದ ಸಚಿವರು, ವಿವಿಧ ವಾರ್ಡ್‌ಗಳಿಗೆ ತೆರಳಿ ರೋಗಿಗಳ ಆರೋಗ್ಯ ವಿಚಾರಿಸಿ, ಆರೋಗ್ಯ ಸಿಬ್ಬಂದಿಯ ಕಾರ್ಯನಿರ್ವಹಣೆ ಬಗ್ಗೆ ಮಾಹಿತಿ ಪಡೆದುಕೊಂಡರು.
ಈ ಸಂದರ್ಭದಲ್ಲಿ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ರವೀಂದ್ರ, ವೈದ್ಯಕೀಯ ಕಾಲೇಜಿನ ಡೀನ್ ಡಾ. ಯುವರಾಜ್, ಶುಶೂಷಾಧಿಕಾರಿ ಶಾಂತಮ್ಮ ಸೇರಿದಂತೆ ಆರೋಗ್ಯ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.
