ಆಸ್ಪತ್ರೆಗೆ ಸಿಎಂ, ಡಿಸಿಎಂ; ಸಚಿವರ ಆರೋಗ್ಯ ವಿಚಾರಿಸಿ ಕುಟುಂಬಕ್ಕೆ ಧೈರ್ಯ ತುಂಬಿದ ನಾಯಕರು
ಬೆಂಗಳೂರು: ಶ್ವಾಸಕೋಶದ ಸೋಂಕಿನಿಂದ ಅಸ್ವಸ್ಥರಾಗಿ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹಿರಿಯೂರು ಶಾಸಕ ಹಾಗೂ ಸಚಿವ ಡಿ. ಸುಧಾಕರ್ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.
ಆಸ್ಪತ್ರೆಗೆ ಭೇಟಿ ನೀಡಿ ವೈದ್ಯರೊಂದಿಗೆ ಚರ್ಚಿಸಿ ಸಚಿವರ ಆರೋಗ್ಯ ಸ್ಥಿತಿಯ ಕುರಿತು ಸಂಪೂರ್ಣ ಮಾಹಿತಿ ಪಡೆದರು. ಬಳಿಕ ಕುಟುಂಬ ಸದಸ್ಯರನ್ನು ಭೇಟಿಯಾಗಿ ಧೈರ್ಯ ತುಂಬಿ, ಶೀಘ್ರ ಗುಣಮುಖರಾಗುತ್ತಾರೆ ಎಂದು ವಿಶ್ವಾಸ ಮೂಡಿಸಿದರು.
ಕಳೆದ ಒಂದು ವಾರದಿಂದ ಶ್ವಾಸಕೋಶದ ತೀವ್ರ ಸೋಂಕಿನಿಂದ ಬಳಲುತ್ತಿರುವ ಸಚಿವರು ಆಸ್ಪತ್ರೆಯ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಕಳೆದ ಕೆಲವು ದಿನಗಳಿಂದ ಅವರ ಆರೋಗ್ಯದಲ್ಲಿ ಏರುಪೇರು ಕಂಡುಬಂದಿತ್ತು. ಚಿಕಿತ್ಸೆ ಬಳಿಕ ಚೇತರಿಸಿಕೊಂಡಿದ್ದರು ಸಹ ವೈದ್ಯರು ನಿಗಾವಹಿಸಿದ್ದಾರೆ.
ಈ ವೇಳೆ ಮಾಜಿ ಸಚಿವ ಆರ್.ವಿ. ದೇಶಪಾಂಡೆ, ಶಾಸಕರಾದ ಟಿ.ರಘುಮೂರ್ತಿ, ರಿಜ್ವಾನ್ ಅರ್ಷದ್, ಐವಾನ್ ಡಿಸೋಜಾ ಸೇರಿದಂತೆ ಹಲವು ಮುಖಂಡರು ಇದ್ದರು.
