ಬೆಂಗಳೂರು: ಮತ್ತೆ ರಾಜ್ಯ ಸಚಿವ ಸಂಪುಟ ಸೇರ್ಪಡೆಗೊಳ್ಳುವುದಾಗಿ ಹೇಳಿರುವ ಮಾಜಿ ಸಚಿವ ಕೆ.ಎನ್. ರಾಜಣ್ಣ ಅವರು, ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಪ್ರಧಾನ ಕಾರ್ಯದರ್ಶಿ (ಸಂಘಟನೆ) ಕೆ.ಸಿ. ವೇಣುಗೋಪಾಲ್ ಅವರನ್ನು ಭೇಟಿ ಮಾಡಿ, ಕಸರತ್ತು ಆರಂಭಿಸಲು ಮುಂದಾಗಿದ್ದಾರೆಂದು ತಿಳಿದುಬಂದಿದೆ.ಬಿಜೆಪಿ ಹಾಗೂ ಭಾರತೀಯ ಚುನಾವಣಾ ಆಯೋಗದ ವಿರುದ್ಧ ಮತಗಳ್ಳನತ ಆರೋಪ ಮಾಡಿದ್ದ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ಹೇಳಿಕೆ ನೀಡಿದ ಬೆನ್ನಲ್ಲೇ ರಾಜಣ್ಣ ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸಲಾಗಿತ್ತು. ರಾಜಣ್ಣ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತರಾಗಿದ್ದರೂ ವಜಾಗೊಳಿಸಲಾಗಿತ್ತು. ಇದು ಹಲವರ ಹುಬ್ಬೇರುವಂತೆ ಮಾಡಿತ್ತು.ಇದೀಗ ಸಚಿವ ಸ್ಥಾನವನ್ನು ಮರಳಿ ಪಡೆಯಲು ಮುಂದಾಗಿರುವ ರಾಜಣ್ಣ ಅವರು, ಹೈಕಮಾಂಡ್ ಮನವೊಲಿಸಲು ಕಸರತ್ತು ಆರಂಭಿಸಿದ್ದಾರೆ. ಇದರಂತೆ ಕೆ.ಸಿ.ವೇಣುಗೋಪಾಲ್ ಅವರನ್ನು ಭರವಸೆ ಇಟ್ಟುಕೊಂಡಿದ್ದು, ಭೇಟಿ ಮಾಡಲು ಮುಂದಾಗಿದ್ದರೆಂದು ತಿಳಿದುಬಂದಿದೆ.
ರಾಹುಲ್ ಗಾಂಧಿ ಭೇಟಿಗೆ ಅಪಾಯಿಂಟ್ಮೆಂಟ್ ಸಿಗುವ ಸಾಧ್ಯತೆ ಕಡಿಮೆ ಇರುವ ಹಿನ್ನೆಲೆಯಲ್ಲಿ ವಿಧಾನಸಭೆ ಅಧಿವೇಶನ ಪೂರ್ಣಗೊಂಡ ಬಳಿಕ ರಾಜಣ್ಣ ಅವರು ದೆಹಲಿಗೆ ತೆರಳಿ ವೇಣುಗೋಪಾಲ್ ಅವರನ್ನು ಭೇಟಿ ಮಾಡಲು ಚಿಂತನೆ ನಡೆಸಿದ್ದಾರೆಂದು ಮೂಲಗಳು ತಿಳಿಸಿವೆ.ಏತನ್ಮಧ್ಯೆ ಸಚಿವ ಸಂಪುಟದಿಂದ ವಜಾಗೊಂಡ ಬೆನ್ನಲ್ಲೇ ರಾಜಣ್ಣ ಅವರಿಗೆ ವಿರೋಧ ಪಕ್ಷ ಬಿಜೆಪಿ, ಎಸ್ಟಿ ಸಮುದಾಯ ಮತ್ತು ಶ್ರೀ ಪ್ರಸನ್ನಂದಪುರಿ ಸ್ವಾಮೀಜಿ ಸೇರಿದಂತೆ ಇತರರಿಂದ ಬೆಂಬಲ ವ್ಯಕ್ತವಾಗುತ್ತಿದೆ.
ಬಿ.ನಾಗೇಂದ್ರ ಅವರನ್ನೂ ಈ ಹಿಂದೆ ಸಚಿವ ಸ್ಥಾನದಿಂದ ವಜಾಗೊಳಿಸಲಾಗಿತ್ತು. ಇದೀಗ ರಾಜಣ್ಣ ಅವರನ್ನು ವಜಾಗೊಳಿಸಲಾಗಿದೆ. ಸಮುದಾಯದ ನಾಯಕರ ವಿರುದ್ಧ ಪಿತೂರಿ ನಡೆದಿದೆ ಎಂದು ಶ್ರೀ ಪ್ರಸನ್ನಂದಪುರಿ ಸ್ವಾಮೀಜಿ ಅವರು ಆರೋಪಿಸಿದ್ದಾರೆ.ಎಸ್ಟಿ ಸಮುದಾಯಗಳಿಂದ ವಿರೋಧ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ಹೈಕಮಾಂಡ್ ಇದೀಗ ಖಾಲಿಯಿರುವ ಎರಡು ಸಚಿವ ಸ್ಥಾನಗಳಿಗೆ ಅದೇ ಸಮುದಾಯಕ್ಕೆ ಸೇರಿದ ನಾಯಕರಿಗೆ ಸ್ಥಾನ ನೀಡುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.ಇದರಂತೆ ಹೆಗ್ಗಡದೇವನಕೋಟೆ ಶಾಸಕ ಅನಿಲ್ ಚಿಕ್ಕಮಾದು, ವಿಜಯನಗರ ಶಾಸಕ ಎಚ್.ಆರ್. ಗವಿಯಪ್ಪ ಮತ್ತು ಚಳ್ಳಕೆರೆ ಶಾಸಕ ಟಿ. ರಘುಮೂರ್ತಿ ಅವರು ಸಚಿವ ಸ್ಥಾನ ರೇಸ್ನಲ್ಲಿದ್ದಾರೆಂದು ತಿಳಿದುಬಂದಿದೆ.ಈ ನಡುವೆ ರಾಜಣ್ಣ ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸಿರುವುದಕ್ಕೆ ತುಮಕೂರಿನ ಸಿದ್ದಗಂಗಾ ಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿ ಅವರು ಆಘಾತ ವ್ಯಕ್ತಪಡಿಸಿದ್ದಾರೆ. ಪಕ್ಷ ಮತ್ತು ಜನರಿಗೆ ಒಳ್ಳೆಯದಾಗಲು ನಾಯಕನನ್ನು ಮರು ನೇಮಕ ಮಾಡುವ ವಿಶ್ವಾಸವಿದೆ ಎಂದು ಹೇಳಿದ್ದಾರೆ.ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ವಿಷಯದ ಬಗ್ಗೆ ಗಮನ ಹರಿಸಿ ರಾಜಣ್ಣ ಅವರನ್ನು ಮತ್ತೆ ಸೇರಿಸಿಕೊಳ್ಳುವಂತೆ ಹೈಕಮಾಂಡ್ಗೆ ಮನವರಿಕೆಮಾಡಿಕೊಡಬೇಕೆಂದು ಒತ್ತಾಯಿಸಿದ್ದಾರೆ.ರಾಜಣ್ಣ ಸಹಕಾರಿ ಕ್ಷೇತ್ರಕ್ಕೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ. ಸಹಕಾರಿ ಮಹಾಮಂಡಲದ ಅಧ್ಯಕ್ಷರಾಗಿ ಬಡವರು ಮತ್ತು ರೈತರಿಗೆ ಸಹಾಯ ಮಾಡಿದ್ದರು. ರಾಜಣ್ಣ ಯಾವಾಗಲೂ ನೇರ, ಆದರೆ ನಿಷ್ಠುರ ವ್ಯಕ್ತಿ. ಅವರ ಮನಸ್ಸಿನಲ್ಲಿ ಯಾವುದೇ ಕೆಟ್ಟದ್ದಿಲ್ಲ. ಅಂತಹ ವ್ಯಕ್ತಿಯನ್ನು ಕೈಬಿಟ್ಟಿರುವ ನಿರ್ಧಾರದ ಬಗ್ಗೆ ಯೋಚಿಸಬೇಕು ಎಂದು ಹೇಳಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.







