ಚಿತ್ರದುರ್ಗ: ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಪೋಕ್ಸೋ ಹಾಗೂ ಬಾಲ್ಯವಿವಾಹ ಪ್ರಕರಣದ ಪಿಡುಗನ್ನು ನಿರ್ಮೂಲನೆ ಮಾಡಲು ಅಧಿಕಾರಿಗಳು ಶ್ರಮಿಸಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಎಂ.ವಿಜಯ್ ಕರೆ ನೀಡಿದರು.ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಪೊಲೀಸ್ ಇಲಾಖೆ, ಕಾರ್ಮಿಕ ಇಲಾಖೆ, ಶಾಲಾ ಶಿಕ್ಷಣ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಹಿಳಾ ಸಬಲೀಕರಣ ಘಟಕ, ಇಂಟನ್ರ್ಯಾಷನಲ್ ಜಸ್ಟಿಸ್ ಮಿಷನ್ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಇವರುಗಳ ಸಂಯುಕ್ತಾಶ್ರಯದಲ್ಲಿ ಮಾನವ ಕಳ್ಳ ಸಾಗಾಣಿಕೆ ತಡೆ ದಿನಾಚರಣೆ ಅಂಗವಾಗಿ, ಮಹಿಳಾ ಮತ್ತು ಮಕ್ಕಳ ಕಳ್ಳ ಸಾಗಾಣಿಕೆ ತಡೆ ಕಾವಲು ಸಮಿತಿ ಹಾಗೂ ಬಾಲ್ಯ ವಿವಾಹ ನಿಷೇಧ ಕಾಯ್ದೆ ಕುರಿತು ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.
ಜಿಲ್ಲಾ ಮತ್ತು ತಾಲ್ಲೂಕುಮಟ್ಟದ ಅಧಿಕಾರಿಗಳು ಈ ಕುರಿತು ತಮ್ಮ ವ್ಯಾಪ್ತಿಯಲ್ಲಿ ಗ್ರಾಮಮಟ್ಟದಲ್ಲಿ ಕಾರ್ಯನಿರ್ವಹಿಸುವ ಅಧಿಕಾರಿಗಳು ಸಿಬ್ಬಂದಿ ಸೂಕ್ತ ಮಾರ್ಗದರ್ಶನ ನೀಡಬೇಕು. ಮಕ್ಕಳ ಗ್ರಾಮಸಭೆ, ಮಹಿಳಾ ಮತ್ತು ಮಕ್ಕಳ ಸಂರಕ್ಷಣೆ ಕುರಿತು ಸಭೆಗಳಲ್ಲಿ ಅಧಿಕಾರಿಗಳು ಭಾಗವಹಿಸಿ, ಪೋಕ್ಸೋ ಹಾಗೂ ಬಾಲ್ಯವಿವಾಹ ಪ್ರಕರಣಗಳ ಜರುಗದಂತೆ ಗ್ರಾಮಮಟ್ಟದಲ್ಲಿ ಬುಡಸಮೇತ ಕಿತ್ತೊಗೆಯಲು ಪ್ರಯತ್ನಿಸಬೇಕು ಎಂದು ನ್ಯಾಯಾಧೀಶ ಎಂ.ವಿಜಯ್ ಹೇಳಿದರು.ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದಿಂದ ಪೋಕ್ಸೋ ಮತ್ತು ಬಾಲ್ಯವಿವಾಹ ಪ್ರಕರಣಗಳನ್ನು ತಡೆಗಟ್ಟುವ ಅಧಿಕಾರಿಗಳು ಸಭೆ ನಡೆಸಿ, ಸಲಹೆ ಸೂಚನೆ ಹಾಗೂ ನಿರ್ದೇಶನಗಳನ್ನು ನೀಡಲಾಗಿದೆ. ಹೆಚ್ಚು ಹೆಚ್ಚು ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳುವ ಮೂಲಕ ಅರಿವು ಮೂಡಿಸಲಾಗುತ್ತಿದೆ. ಆದಾಗ್ಯೂ ಗ್ರಾಮಮಟ್ಟದ ಅಧಿಕಾರಿಗಳಲ್ಲಿ ಸಮನ್ವಯದ ಕೊರತೆ ಇದೆ. ಪ್ರಕರಣ ನಡೆದು ಮೂರು-ನಾಲ್ಕು ದಿನಗಳಾದರೂ ಅಧಿಕಾರಿಗಳು ಸೂಕ್ತ ಕಾನೂನು ಕ್ರಮ ಕೈಗೊಳ್ಳುವುದಿಲ್ಲ. ಕೆಲ ಪ್ರಕರಣಗಳಲ್ಲಿ ಉನ್ನತ ಅಧಿಕಾರಿಗಳಿಗೆ ಮಾಹಿತಿ ನೀಡದೇ ನಿರ್ಲಕ್ಷೆ ವಹಿಸುವುದು ಕಂಡು ಬಂದಿದೆ. ಇನ್ನೂ ಮುಂದೆ ಪ್ರಕರಣಗಳ ವರದಿ ನೀಡದ, ನಿರ್ಲಕ್ಷ ವಹಿಸುವ ಅಧಿಕಾರಿಗಳನ್ನೇ ನೇರವಾಗಿ ಹೊಣೆ ಮಾಡಿ ಕಾನೂನು ಪ್ರಕಾರ ಕ್ರಮ ಕೈಗೊಳ್ಳುವುದಾಗಿ ನ್ಯಾಯಾಧೀಶ ಎಂ.ವಿಜಯ್ ಎಚ್ಚರಿಸಿದರು.
ಮಾನವ ಕಳ್ಳ ಸಾಗಾಣಿಕೆಗೆ ಬಹಳಷ್ಟು ಮುಖಗಳಿದ್ದು, ಪ್ರಸಕ್ತ ವರ್ಷದಲ್ಲಿ ದೇಶದಲ್ಲಿ 2 ಲಕ್ಷಕ್ಕೂ ಹೆಚ್ಚು ಮಹಿಳೆಯರು ಹಾಗೂ ಮಕ್ಕಳನ್ನು ಕಳ್ಳ ಸಾಗಾಣಿಕೆ ಜಾಲದಿಂದ ಸಂರಕ್ಷಣೆ ಮಾಡಲಾಗಿದೆ. ಬಿಗಿಯಾದ ಕಾನೂನುಗಳನ್ನು ರಚಿಸಲಾಗಿದೆ ನ್ಯಾಯಾಧೀಶ ಎಂ.ವಿಜಯ್ ತಿಳಿಸಿದರು.ಜಿ.ಪಂ. ಉಪ ಕಾರ್ಯದರ್ಶಿ ಡಾ.ರಂಗಸ್ವಾಮಿ ಮಾತನಾಡಿ, ಗ್ರಾಮಮಟ್ಟದಲ್ಲಿ ಬಾಲ್ಯವಿವಾಹ ತಡೆಗೆ ಹೆಚ್ಚಿನ ಅರಿವು ಮೂಡಿಸಬೇಕು. ಬಾಲ್ಯ ವಿವಾಹ ಶಿಕ್ಷಾರ್ಹ ಅಪರಾಧವಾಗಿದೆ ಎಂದು ಸಾರ್ವಜನಿಕರಿಗೆ ಮನದಟ್ಟು ಮಾಡಬೇಕು. ಮಕ್ಕಳ ಸಹಾಯವಾಣಿ, ಮಹಿಳಾ ಸಹಾಯವಾಣಿ, ತುರ್ತು ಸ್ಪಂದನಾ ಸಹಾಯವಾಣಿ ಸಂಖ್ಯೆಗಳನ್ನು ಗೋಡೆಬರೆಹದಲ್ಲಿ ಬರೆಸಿ ಜನರಿಗೆ ಅರಿವು ಮೂಡಿಸಬೇಕು. ನಾವೆಲ್ಲರೂ ಸೇರಿ ಈ ಸಾಮಾಜಿಕ ಪಿಡುಗು ಹೋಗಲಾಡಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸೋಣ ಎಂದರು.ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಕೆ.ಹೆಚ್.ವಿಜಯಕುಮಾರ್ ಮಾತನಾಡಿ, ಲೈಂಗಿಕ ಶೋಷಣೆಗಾಗಿ, ಭಿಕ್ಷಾಟನೆಗಾಗಿ, ಜೀತಕ್ಕಾಗಿ ಬಾಲಕಾರ್ಮಿಕತೆಗಾಗಿ, ಅಂಗಾಂಗ ಕಸಿಗಾಗಿ, ಬಾಲ್ಯವಿವಾಹಕ್ಕಾಗಿ ಮಹಿಳೆ ಹಾಗೂ ಮಕ್ಕಳು ಕಳ್ಳ ಸಾಗಾಣಿಕೆಗೆ ಒಳಪಡುತ್ತಾರೆ. ಬಿಗಿಯಾದ ಕಾನೂನು, ಜಾಗೃತಿ ಹಾಗೂ ಪೊಲೀಸ್ ಕಾರ್ಯಾಚರಣೆಗಳ ಫಲವಾಗಿ ಇತ್ತೀಚಿನ ದಿನಗಳಲ್ಲಿ ಮಾನವ ಕಳ್ಳ ಸಾಗಾಣಿಕೆ ಕಡಿಮೆಯಾಗುತ್ತಿದೆ. ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಮಕ್ಕಳ ಕಾವಲು ಸಮಿತಿ ಇದ್ದು, 14 ರಿಂದ 18 ವರ್ಷದ ಮಕ್ಕಳು ಕಾಣೆಯಾದರೆ ಗ್ರಾಮ ಪಂಚಾಯಿತಿಗೆ ತಿಳಿಸಿ, ಪತ್ತೆ ಹಚ್ಚುವ ಕಾರ್ಯ ಮಾಡಬೇಕು. ಬಾಲ್ಯವಿವಾಹ ತಡೆಯುವಲ್ಲಿ ಎಲ್ಲ ಇಲಾಖೆಗಳ ಜವಾಬ್ದಾರಿ ಇದೆ ಎಂದರು.
ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಎ.ಎಂ.ವೀಣಾ ಅವರು ಮಾನವ ಕಳ್ಳ ಸಾಗಾಣಿಕೆ ತಡೆ ದಿನಾಚರಣೆ ಅಂಗವಾಗಿ ಪ್ರತಿಜ್ಞಾವಿಧಿ ಬೋಧಿಸಿದರು.ಕಾರ್ಯಕ್ರಮದಲ್ಲಿ ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮೇಶ್ ಈಶ್ವರನಾಯ್ಕ್, ಡಿಡಿಪಿಯು ಕೆ.ತಿಮ್ಮಯ್ಯ, ಡಿಡಿಪಿಐ ಎಂ.ಆರ್.ಮಂಜುನಾಥ್, ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ಪಿ.ಶೀಲಾ, ಕಾರ್ಮಿಕ ಅಧಿಕಾರಿ ಬಾಲಚಂದ್ರ ಬಗಟಿ, ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಜೆ.ವೈಶಾಲಿ ಇದ್ದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.



