ಬೆಂಗಳೂರು: ರಾಜ್ಯದಲ್ಲಿರುವ ಎಲ್ಲಾ ಅರಣ್ಯ ಪ್ರದೇಶದೊಳಗೆ ದನಕರು, ಮೇಕೆ, ಕುರಿ ಮೇಯಿಸುವುದನ್ನು ನಿಷೇಧಿಸಲು ನಿಯಮಾನುಸಾರ ಕ್ರಮ ವಹಿಸುವಂತೆ ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಸೂಚನೆ ನೀಡಿದ್ದಾರೆ.
ಈ ಸಂಬಂಧ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಮತ್ತು ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ನಿರ್ದೇಶನ ನೀಡಿರುವ ಸಚಿವರು, ಹೆಚ್ಚಿನ ಸಂಖ್ಯೆಯಲ್ಲಿ ಜಾನುವಾರುಗಳನ್ನು ಅರಣ್ಯ ಪ್ರದೇಶದೊಳಗೆ ಮೇಯಲು ಬಿಡುವುದರಿಂದ ಕಾಡಿನಲ್ಲಿ ಆಗಷ್ಟೇ ಮೊಳಕೆ ಒಡೆದ ಚಿಕ್ಕಪುಟ್ಟ ಸಸಿಗಳನ್ನು ಸಾಕು ಪ್ರಾಣಿಗಳು ತಿಂದು ಹಾಕುತ್ತಿದ್ದು, ಹೊಸ ಗಿಡಗಳು ಬೆಳೆಯದೇ ಅರಣ್ಯ ಬೆಳವಣಿಗೆಗೆ ಅಡ್ಡಿಯಾಗುತ್ತಿದೆ ಎಂದು ಪರಿಸರಪ್ರೇಮಿಗಳು ಅಭಿಪ್ರಾಯಪಟ್ಟಿರುವುದಾಗಿ ತಿಳಿಸಿದ್ದಾರೆ.ಅಪಾರ ಸಂಖ್ಯೆಯಲ್ಲಿ ಸಾಕುಪ್ರಾಣಿಗಳು ಕಾಡಿನಲ್ಲಿ ಮೇಯುವುದರಿಂದ ಕಾಡಿನಲ್ಲಿರುವ ಸಸ್ಯಹಾರಿ ಪ್ರಾಣಿಗಳಿಗೂ ಮೇವಿನ ಕೊರತೆ ಉಂಟಾಗುತ್ತದೆ. ಅಲ್ಲದೇ ನಾಡಿನಿಂದ ಕಾಡಿಗೆ ಮೇಯಲು ಹೋಗುವ ಪ್ರಾಣಿಗಳಿಂದ ವನ್ಯಜೀವಿಗಳು ಸಾಂಕ್ರಾಮಿಕ ರೋಗಗಳಿಗೆ ತುತ್ತಾಗುವ ಸಾಧ್ಯತೆಯೂ ಇರುತ್ತದೆ. ಇದು ವನ್ಯಜೀವಿ-ಮಾನವ ಸಂಘರ್ಷ ಹೆಚ್ಚಳವಾಗುತ್ತದೆ ಎಂದು ಸಚಿವರು ಹೇಳಿದ್ದಾರೆ.
ಕಾಡಿನೊಳಗೆ ಹೋಗುವ ದನಗಾಹಿಗಳು ವನ್ಯಜೀವಿ ದಾಳಿಯಿಂದ ಮೃತಪಟ್ಟರೆ ಪರಿಹಾರ ನೀಡಲೂ ನಿಯಮದಲ್ಲಿ ಅವಕಾಶ ಇರುವುದಿಲ್ಲ. ಹೀಗಾಗಿ ಅರಣ್ಯ ಪ್ರದೇಶಗಳಲ್ಲಿ ಜಾನುವಾರು ಮೇಯಿಸುವುದನ್ನು ನಿಷೇಧಿಸಬೇಕು ಎಂದು ಪರಿಸರವಾದಿಗಳು ಅಭಿಪ್ರಾಯಪಟ್ಟಿರುವ ಹಿನ್ನೆಲೆಯಲ್ಲಿ ಈ ಬಗ್ಗೆ ಪರಿಶೀಲಿಸಿ ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.ಕಾಡಿನಲ್ಲಿರುವ ವನ್ಯಜೀವಿಗಳು ಮೇಯಲು ಹೋದ ದನಕರುಗಳನ್ನು ಕೊಂದಾಗ, ಆಕ್ರೋಶಗೊಂಡು ಕೆಲವರು ಮೃತ ಜಾನುವಾರುಗಳಿಗೆ ವಿಷಹಾಕುವ ಕಾರಣ ವನ್ಯಜೀವಿಗಳು ಸಾವಿಗೀಡಾಗುತ್ತವೆ. ಇದಕ್ಕೆ ಇತ್ತೀಚೆಗೆ ಹೂಗ್ಯಂ ವಲಯದಲ್ಲಿ ಒಂದು ತಾಯಿ ಹುಲಿ ಮತ್ತು ನಾಲ್ಕು ಮರಿ ಹುಲಿಗಳು ಸಾವಿಗೀಡಾಗಿರುವುದನ್ನು ಪರಿಸರ ಪ್ರೇಮಿಗಳು ಉದಾಹರಣೆಯಾಗಿ ಉಲ್ಲೇಖಿಸಿದ್ದಾರೆ.
ತಮಿಳುನಾಡಿನ ಅರಣ್ಯದೊಳಗೆ ಸಾಕು ಪ್ರಾಣಿಗಳನ್ನು ಮೇಯಿಸುವುದರ ವಿರುದ್ಧ ಮದ್ರಾಸ್ ಹೈಕೋರ್ಟ್ ತೀರ್ಪಿನ ಬಳಿಕ, ನೆರೆಯ ರಾಜ್ಯದಿಂದಲೂ ನಮ್ಮ ರಾಜ್ಯಕ್ಕೆ ದನಕರುಗಳನ್ನು ತಂದು ಕಾಡಿನಲ್ಲಿ ಮೇಯಿಸಲಾಗುತ್ತಿದೆ. ಹೀಗಾಗಿ ಕರ್ನಾಟಕ ರಾಜ್ಯದ ಅರಣ್ಯಗಳ ಸಂರಕ್ಷಣೆ ಮತ್ತು ಸಂವರ್ಧನೆಯ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲ ಅರಣ್ಯ ಪ್ರದೇಶದೊಳಗೆ ಸಾಕು ಪ್ರಾಣಿಗಳನ್ನು ಮೇಯಲು ಬಿಡುವುದನ್ನು ನಿರ್ಬಂಧಿಸಲು ಮತ್ತು ನಿಷೇಧಿಸಲು ನಿಯಮಾನುಸಾರ ಕ್ರಮವಹಿಸಲು ಸಚಿವರು ಸೂಚಿಸಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.



