ಬೆಂಗಳೂರು: ಶಾಸಕರು ತಮ್ಮ ಕ್ಷೇತ್ರ ವ್ಯಾಪ್ತಿಯಲ್ಲಿ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲು ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ರೂ. 50 ಕೋಟಿ ಅನುದಾನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.ಕ್ಷೇತ್ರದಲ್ಲಿ ಅಭಿವೃದ್ಧಿ ಕಾಮಗಾರಿಗೆ ಅನುದಾನದ ಕೊರತೆ ಬಗ್ಗೆ ಆಡಳಿತಾರೂಢ ಕಾಂಗ್ರೆಸ್ ಸೇರಿದಂತೆ ಎಲ್ಲಾ ಪಕ್ಷದ ಶಾಸಕರಲ್ಲೂ ಅಸಮಾಧಾನವಿದೆ. ಈ ಸಂಬಂಧ ಜುಲೈ 15 ರಂದು ಶಾಸಕರಿಗೆ ಪತ್ರ ಬರೆದಿರುವ ಸಿಎಂ ಸಿದ್ದರಾಮಯ್ಯ, ಸಿಎಂ ಮೂಲಸೌಲಭ್ಯ ಅಭಿವೃದ್ಧಿ ಕಾರ್ಯಕ್ರಮದಡಿ, 2025-26ನೇ ಸಾಲಿನ ರಾಜ್ಯ ಬಜೆಟ್ ನಲ್ಲಿ ಘೋಷಿಸಿದಂತೆ ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ರೂ. 50 ಕೋಟಿ ಅನುದಾನ ಒದಗಿಸಲಾಗುವುದು ಎಂದು ತಿಳಿಸಿದ್ದಾರೆ.
ಇದರಲ್ಲಿ ಲೋಕೋಪಯೋಗಿ ಇಲಾಖೆ, ರಸ್ತೆ ಮತ್ತು ಸೇತುವೆ ಕೆಲಸ, ಗ್ರಾಮಾಂತರ ರಸ್ತೆ, ಸೇತುವೆ ಮತ್ತು ನಗರ ಪ್ರದೇಶದ ಕಾಮಗಾರಿಗೆ ರೂ. 37.50 ಕೋಟಿ ಮತ್ತು ಶಾಸಕರು ತಮ್ಮ ವಿವೇಚನೆಯಿಂದ ಆಯ್ಕೆ ಮಾಡಬಹುದಾದ ಇತರೆ ಇಲಾಖಾ ಕಾಮಗಾರಿಗಳಿಗೆ ರೂ. 12.50 ಕೋಟಿ ನೀಡಲಾಗುತ್ತಿದೆ.
ಶಾಸಕರು ತಮ್ಮ ಬೇಡಿಕೆ ಪತ್ರದೊಂದಿಗೆ ನಿಗದಿತ ನಮೂನೆಯಲ್ಲಿ ಕಾಮಗಾರಿಗಳ ವಿವರಗಳನ್ನು ಮುಖ್ಯಮಂತ್ರಿಗಳಿಗೆ ನೀಡುವಂತೆ ಸೂಚಿಸಲಾಗಿದೆ. ಜುಲೈ 30 ಮತ್ತು 31 ರಂದು ಕೊಠಡಿ ಸಂಖ್ಯೆ-313, ಸಮಿತಿ ಕೊಠಡಿ, 3ನೇ ಮಹಡಿ, ವಿಧಾನಸೌಧದಲ್ಲಿ ಶಾಸಕರ ಜಿಲ್ಲಾವಾರು ಸಭೆ ಏರ್ಪಡಿಸಲಾಗಿದ್ದು, ಕಾಮಗಾರಿಗಳ ವಿವರಗಳೊಂದಿಗೆ ಶಾಸಕರು ಸಭೆಗೆ ಹಾಜರಾಗುವಂತೆ ತಿಳಿಸಲಾಗಿದೆ.
ಪತ್ರದಲ್ಲಿ ಕಾಂಗ್ರೆಸ್ ಶಾಸಕರಿಗೆ ಮಾತ್ರ ಹಣ ಹಂಚಿಕೆ ಎಂದು ಎಲ್ಲಿಯೂ ಸೂಚಿಸಿಲ್ಲವಾದರೂ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ತಾರತಮ್ಯದ ಆರೋಪ ಮಾಡಿವೆ. ಎಲ್ಲ ಶಾಸಕರಿಗೂ ಹಣ ಬಿಡುಗಡೆ ಮಾಡಲಾಗುವುದು ಎಂದು ಅಧಿಕೃತ ಮೂಲಗಳು ತಿಳಿಸಿವೆ.
ಬಿಜೆಪಿ ಮತ್ತು ಜೆಡಿಎಸ್ ಶಾಸಕರಿಗೆ ರೂ. 25 ಕೋಟಿ ನೀಡಲಾಗುತ್ತಿದೆ ಎಂಬ ಬಗ್ಗೆ ಮಾಹಿತಿ ಸಿಕ್ಕಿದೆ ಎಂದು ಆರೋಪಿಸಿದ ವಿಪಕ್ಷ ನಾಯಕ ಆರ್. ಅಶೋಕ, ಸಮತೋಲಿತ ಅಭಿವೃದ್ಧಿಗೆ ಎಲ್ಲ ಶಾಸಕರಿಗೆ ಸಮಾನ ಅನುದಾನ ನೀಡುವಂತೆ ಮುಖ್ಯಮಂತ್ರಿಗೆ ಒತ್ತಾಯಿಸಿದ್ದಾರೆ.
ಕಳೆದ ಎರಡು ವರ್ಷಗಳಿಂದ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆದಿಲ್ಲ. ತಮ್ಮ ಕ್ಷೇತ್ರಗಳಿಗೆ ಮುಖ ತೋರಿಸಲು ಆಗುತ್ತಿಲ್ಲ ಎಂದು ಕಾಂಗ್ರೆಸ್ ಶಾಸಕರೇ ಹೇಳಿಕೊಳ್ಳುತ್ತಿದ್ದಾರೆ. ಈಗ ರೂ. 50 ಕೋಟಿ ಅನುದಾನ ನೀಡುವ ಕುರಿತು ಸುತ್ತೋಲೆ ಹೊರಡಿಸಲಾಗಿದೆ. ಆದರೆ, ಬಿಜೆಪಿ ಮತ್ತು ಜೆಡಿಎಸ್ ಶಾಸಕರಿಗೆ ರೂ. 25 ಕೋಟಿ ನೀಡಲಾಗುವ ಬಗ್ಗೆ ಮಾಹಿತಿ ಇದೆ. ಆದರೆ ಇನ್ನೂ ಯಾವುದೇ ಗ್ಯಾರಂಟಿ ಇಲ್ಲ ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.



