ರಂಜಾನ್ ನಮಾಜ್ ವೇಳೆ ಹೆಜ್ಜೇನು ದಾಳಿ; ಐವರ ಸ್ಥಿತಿ ಗಂಭೀರ
ದಾವಣಗೆರೆ: ರಂಜಾನ್ ನಮಾಜ್ ವೇಳೆ ಹೆಜ್ಜೇನು ದಾಳಿ ನಡೆಸಿದ ಪರಿಣಾಮ 25ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಐವರ ಸ್ಥಿತಿ ಗಂಭೀರವಾದ ಘಟನೆ ಆನಗೋಡು ಗ್ರಾಮದ ಬಳಿ ಶನಿವಾರ ನಡೆದಿದೆ.
ಗ್ರಾಮದ ಬಳಿ ರಂಜಾನ್ ಪ್ರಾರ್ಥನೆ ಸಲ್ಲಿಸುತ್ತಿದ್ದವರ ಮೇಲೆ ಹೆಜ್ಜೇನುಗಳು ಏಕಾಏಕಿ ದಾಳಿ ನಡೆಸಿದ್ದು, ಸುಮಾರು 25ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಈ ಪೈಕಿ ಐವರ ಸ್ಥಿತಿ ಗಂಭೀರವಾಗಿದೆ. ಕೂಡಲೇ ದಾವಣಗೆರೆ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.
ನಮಾಜ್ ಮಾಡುತ್ತಿದ್ದ ಸಂದರ್ಭದಲ್ಲಿ, ಕೆಲವು ಯುವಕರು ಅಲ್ಲಿದ್ದ ಹೆಜ್ಜೇನು ಗೂಡಿಗೆ ಕಲ್ಲೆಸೆದಿದ್ದಾರೆ ಎನ್ನಲಾಗಿದೆ. ಇದರಿಂದ ಕೆರಳಿದ ಹೆಜ್ಜೇನುಗಳ ಗುಂಪು ಪ್ರಾರ್ಥನೆಯಲ್ಲಿದ್ದ ಜನರ ಮೇಲೆ ಏಕಾಏಕಿ ಎರಗಿದೆ. ಹೆಜ್ಜೇನು ದಾಳಿ ಮಾಡುತ್ತಿದ್ದಂತೆ ನೂರಾರು ಜನರು ಜೀವ ಉಳಿಸಿಕೊಳ್ಳಲು ದಿಕ್ಕಾಪಾಲಾಗಿ ಓಡಿದ್ದಾರೆ.
ಗಂಭೀರವಾಗಿ ಗಾಯಗೊಂಡವರನ್ನು ಐಸಿಯು ವಿಭಾಗದಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆಯ ವಿಷಯ ತಿಳಿಯುತ್ತಿದ್ದಂತೆ ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ ಅವರು ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದ್ದಾರೆ.
ಜತೆಗೆ ಸಂತ್ರಸ್ತರಿಗೆ ವೈಯಕ್ತಿಕವಾಗಿ ಚಿಕಿತ್ಸಾ ವೆಚ್ಚಕ್ಕೆ ಧನಸಹಾಯ ಮಾಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ.
